ಕೆ.ಆರ್.ಪೇಟೆ ಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಅಧಿಕಾರಿಗಳು ಬದ್ಧತೆಯಿಂದ ಶ್ರೀಸಾಮಾನ್ಯನ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸೂಚನೆ... ಕೃಷ್ಣರಾಜಪೇಟೆ ಪಟ್ಟಣದ ಪ್ರವಾಸಿಮಂದಿರದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಲೋಕಾಯುಕ್ತ ಹಿರಿಯ ಇನ್ಸ್ ಪೆಕ್ಟರ್ ಶಶಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆಗಳ ನಿವಾರಣಾ ಸಭೆಯು ನಡೆಯಿತು.
ಅಧಿಕಾರಿಗಳು ನಿಗಧಿತ ಅವಧಿಯೊಳಗೆ ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಕಾನೂನಿನ ಪರಿಮಿತಿಯೊಳಗೆ ಮಾಡಿಕೊಡುವ ಮೂಲಕ ಬದ್ಧತೆಯನ್ನು ಪ್ರದರ್ಶನ ಮಾಡಬೇಕು. ಲಂಚದ ಹಣಕ್ಕೆ ಒತ್ತಾಯಿಸಿ ಸಂವಿಧಾನಬದ್ಧವಾದ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸತಾಯಿಸಿದರೆ ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು. ವಿವಿಧ ಕಛೇರಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ನೀಡಿದರೆ ಖಾಲಿ ಹುದ್ದೆಗಳ ಭರ್ತಿಗೆ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಶಿಕುಮಾರ್ ತಿಳಿಸಿದರು.
ಸಭೆಯಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ರವಿಕಿರಣ್, ಬಿಇಓ ಎಸ್.ರೇವಣ್ಣ, ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್, ತಾ.ಪಂ ಇ.ಓ., ಚಂದ್ರಮೌಳಿ, ಕಾರ್ಮಿಕ ನಿರೀಕ್ಷಕ ಮಹೇಶ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.